Published
1 year agoon
By
Akkare Newsಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು ಪುತ್ತಿಲ ಪರಿವಾರದ ಅಭ್ಯರ್ಥಿಗಳಿಂದ ನಾಳೆ (ಡಿ.14) ನಾಮಪತ್ರ ಸಲ್ಲಿಕೆ ನಡೆಯಲಿದೆ.
ನಾಳೆ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ನಗರಸಭೆಯಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ.ಈಗಾಗಲೇ ಗ್ರಾಮ ಪಂಚಾಯತ್ ಉಪಚುನಾವಣೆ, ಸಹಕಾರ ಸಂಘಗಳ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ನಗರಸಭೆ ಉಪಚುನಾವಣೆಯ ಅಖಾಡಕ್ಕೆ ಕೂಡ ಪುತ್ತಿಲ ಪರಿವಾರ ಎಂಟ್ರಿ ನೀಡಿದೆ.
ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.