Published
10 months agoon
By
Akkare Newsಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ.
ಸೂರಜ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹಾಸನ ಜಿಲ್ಲೆ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಬೆಂಗಳೂರಿನಲ್ಲಿ ಮುಖಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಸುಮಾರು 16 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಸಂತ್ರಸ್ತ ಯುವಕ ಲೋಕಸಭೆ ಚುನಾವಣೆಯ ವೇಳೆ ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ. ಈ ವೇಳೆ ಆತನನ್ನು ಪರಿಚಯ ಮಾಡಿಕೊಂಡಿದ್ದ ಸೂರಜ್ ರೇವಣ್ಣ, ಬಳಿಕ ಆತನಿಗೆ ಮೆಸೇಜ್ ಮಾಡಿ ಆಪ್ತತೆ ಬೆಳೆಸಿಕೊಂಡಿದ್ದರು. ಜೂನ್ 16ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.
“ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದ ಸೂರಜ್ ರೇವಣ್ಣ, ಗನ್ನಿಕಡದ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ಕೊಟ್ಟು ಕರೆಸಿಕೊಂಡಿದ್ದರು. ಸಂದೇಶ ನಂಬಿಕೊಂಡು ಅಲ್ಲಿಗೆ ಹೋಗಿದ್ದೆ.
ನಾನು ತೋಟದ ಮನೆಗೆ ತಲುಪಿಪಿದ ಬಳಿಕ, ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು ಹೋಗಿ ಸಲಿಂಗಕಾಮಕ್ಕೆ ಒತ್ತಾಯಿಸಿದ್ದಾರೆ. ನನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ.
ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿ, ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಗಂಭೀರ ಆರೋಪ ಮಾಡಿರುವುದಾಗಿ ವರದಿಯಾಗಿದೆ.