Published
10 months agoon
By
Akkare Newsಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸರ್ಕಾರದಿಂದ ಅಧಿಕೃತ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಾದಯಾತ್ರೆಗೆ ನಾವು ಅಧಿಕೃತ ಅನುಮತಿ ನೀಡಲು ಸಾಧ್ಯವಿಲ್ಲ. ಅದಕ್ಕೆ ಕಾನೂನು ಅಡ್ಡಿಯಿದೆ. ಆದರೆ, ನಾವು ಪಾದಯಾತ್ರೆಯನ್ನು ತಡೆಯಲು ಹೋಗುವುದಿಲ್ಲ. ಯಾರಿಗೂ ತೊಂದರೆ ಮಾಡದೆ ಪಾದಯಾತ್ರೆ ಮಾಡುವುದಾದರೆ ಮಾಡಲಿ. ಬೇಕಾದ ವ್ಯವಸ್ಥೆಯನ್ನು ಮಾಡಿ ಕೊಡುತ್ತೇವೆ” ಎಂದರು.
ಪ್ರತಿಪಕ್ಷಗಳ ಪಾದಯಾತ್ರೆಗೆ ಕಾಂಗ್ರೆಸ್ ಕೂಡ ರಣತಂತ್ರ ಹೆಣೆದು ಕೌಂಟರ್ ಕೊಡಲಿದೆ. ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಅದ್ದರಿಂದ ನಾವೂ ಕೂಡ ರಾಜಕೀಯ ಮಾಡಬೇಕಾಗುತ್ತದೆ. ಇದಕ್ಕೆ ಸರ್ಕಾರವನ್ನು ಬಳಸಿಕೊಳ್ಳಲ್ಲ. ಪಕ್ಷದ ವತಿಯಿಂದ ಮಾಡಲಿದ್ದೇವೆ. ಈ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷರು ಡಿ.ಕೆ ಶಿವಕುಮಾರ್ ಅವರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ವಾಲ್ಮಿಕಿ ಅಭಿವೃದ್ದಿ ನಿಗಮ ಮತ್ತು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ರಂದು ಮೈಸೂರಿನಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ.