ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕುಮಾರಸ್ವಾಮಿ ಗಣಿ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು: ಡಿಸಿಎಂ ಡಿ ಕೆ ಶಿವಕುಮಾರ್

Published

on

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಗಣಿ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ಜನಾಂದೋಲನ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿ, ಭಾಷಣದುದ್ದಕ್ಕೂ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅದರಲ್ಲೂ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

 

‘ವಿಜಯೇಂದ್ರ, ಅಶೋಕ್, ಕುಮಾರಸ್ವಾಮಿ ಅವರೇ ಸುಮ್ಮನೆ ಪಾದಯಾತ್ರೆ ಮಾಡುವುದಲ್ಲ, ನಮ್ಮ ಪ್ರಶ್ನೆಗಳಿಗೆ ಉತ್ತರಕೊಟ್ಟು ಹೆಜ್ಜೆ ಹಾಕಿ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಹಿಂದುಳಿದ ವರ್ಗದ ನಾಯಕ 2ನೇ ಬಾರಿ ಮುಖ್ಯಮಂತ್ರಿಯಾಗಿರುವುದನ್ನು ನಿಮಗೆ ಸಹಿಸಲು ಆಗುತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

 

 

 

ಡಿನೋಟಿಫಿಕೇಶನ್ ಪ್ರಕರಣದಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದು ಯಾರು? ನೀವು ಧರ್ಮಸ್ಥಳಕ್ಕೆ ಹೋಗಿ ಆಣೆಮಾಡಿದ ನಂತರ ಏನಾಯಿತು? ಎಂಬುದನ್ನು ನೀವೇ ಚರ್ಚೆ ಮಾಡಿಕೊಳ್ಳಿ. ‘ಶಿವಕುಮಾರ್ ಅಪ್ಪ ಅಮ್ಮನಿಗೆ ಹುಟ್ಟಿಲ್ಲ’ ಎಂದು ಹೇಳಿದ್ದ ಕುಮಾರಸ್ವಾಮಿ ಸಾತನೂರಿಗೆ ಬಂದು ಕ್ಷಮೆ ಕೇಳಿದ್ದ. ಅಂದೇ ಯಾರಿಗೂ ಹೆದರದ ದೊಡ್ಡ ಆಲದಹಳ್ಳಿ ಕೆಂಪೇಗೌಡರ ಮಗನಾದ ನಾನು ಇಂದು ಹೆದರುತ್ತೇನೆಯೇ? ನಿಮ್ಮ ಪಾದಯಾತ್ರೆಗಳಿಗೆಲ್ಲ ಹೆದರುವ ಮಗ ನಾನಲ್ಲ’ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ನಾವು ನಿಮ್ಮ ಪೆನ್ ಡ್ರೈವ್ ವಿಚಾರಕ್ಕೆ ಬಂದಿದ್ದೇವೆಯೇ? ನೀನುಂಟು ನಿಮ್ಮ ಅಣ್ಣ, ತಮ್ಮಂದಿರು ಉಂಟು. ಪೆನ್ ಡ್ರೈವ್ ಹಿಂದೆ ಮಹಾನಾಯಕ ಇದ್ದಾರೆ ಎಂದು ಹೇಳಿದ್ದ ನೀನು ಮಾತಿಗೆ ಬದ್ಧನಾಗಿ ಇರಬೇಕಿತ್ತು. ನನ್ನ ಬಗ್ಗೆ ಮಾತನಾಡಲಿಲ್ಲ ಅಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ಗೊತ್ತಿದೆ. ಇದು ಇವತ್ತಿನದಲ್ಲ, 1985ರಿಂದ ನಿಮ್ಮ ಕುಟುಂಬದ ಹಾಗೂ ನನ್ನ ನಡುವೆ ತಿಕ್ಕಾಟ ನಡೆಯುತ್ತಿದೆ’ ಎಂದು ಹೇಳಿದರು.

ನೀವು ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಕತ್ತರಿಸುವವರು, ನಾವು ಸಮಾಜವನ್ನು ಒಗ್ಗೂಡಿಸಿ ಹೊಲಿಯುವವರು. ಇದೇ ನಮಗೂ ನಿಮಗೂ ಇರುವ ವ್ಯತ್ಯಾಸ. ಕುಮಾರಣ್ಣ ಈ ಹಿಂದೆ ಏನೇನು ಮಾತನಾಡಿದ್ದೆ? ಯಾರ ಗುಣಗಾನ ಮಾಡಿದ್ದೆ? ಎಲ್ಲವನ್ನೂ ಮೈಸೂರು ಮತ್ತು ಮಂಡ್ಯ ಸಮಾವೇಶಗಳಲ್ಲಿ ತೋರಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

‘ನನ್ನ ಅಧ್ಯಕ್ಷತೆಯಲ್ಲಿ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದಿದೆ. ನಿನ್ನ ಅಧ್ಯಕ್ಷತೆಯಲ್ಲಿ ಗೆದಿದ್ದು ಕೇವಲ 19 ಸ್ಥಾನಗಳು ಮಾತ್ರ. ಲೋಕಸಭೆ ಚುನಾವಣೆಯಲ್ಲಿ ಎರಡು ಸೀಟು ಗೆದ್ದು, ಬಿಜೆಪಿಯವರನ್ನು ‘ ಬ್ಲಾಕ್‌ಮೇಲ್ ’ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದೀಯಾ. ನಿನ್ನ ಮಗ ಹಾಗೂ ಜಿ.ಟಿ.ದೇವೇಗೌಡರು ಪಾದಯಾತ್ರೆಗೆ ಹೋಗುವುದಿಲ್ಲ ಎಂದು ಏಕೆ ಹೇಳಿದರು’ ಎಂದು ವ್ಯಂಗ್ಯವಾಡಿದರು.

 

 

ಸಮಾವೇಶದಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಎಚ್.ಸಿ.ಮಹದೇವಪ್ಪ, ಎನ್.ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ಎಂ .ಸಿ. ಸುಧಾಕರ್ ಹಾಗೂ ಶಾಸಕರು, ವಿಧಾನ ಪರಿಷತ್ ಸದಸ್ಯರು,ಮಾಜಿ ಸಚಿವರು ಇದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version