Published
4 months agoon
By
Akkare Newsರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮಹತ್ವದ ತಿರುವ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಅಮೇರಿಕಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಮಲಾ ಹ್ಯಾರಿಸ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಫೋನ್ ಮಾಡಿದ್ದಾರೆ. ಕರೆಯಲ್ಲಿ ಮಹತ್ವದ ಮಾತುಕತೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಇಂದೇ ಡಿಕೆಶಿ(D K Shivkumar) ಅಮೆರಿಕಾಕ್ಕೆ ಹಾರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಈ ಸಲದ ಅಮೆರಿಕಾ ಚುನಾವಣೆಯಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಹೀಗಾಗಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಭಾರತೀಯ ಮೂಲದ ಪ್ರಜೆಗಳು ಕೂಡ ಅಮೆರಿಕಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಅದರಲ್ಲಿ ನಮ್ಮ ಉಪಮುಖ್ಯಮಂತ್ರಿ ಡಿಕೆಶಿ ಅವರದ್ದು ಮಹತ್ವದ ಪಾತ್ರ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಮಾತನಾಡಲೆಂದೇ ಕಮಲಾ ಅವರು ಡಿಕೆಶಿಗೆ ಫೋನ್ ಮಾಡಿ ಆಹ್ವಾನ ನೀಡಿದ್ದಾರೆ. ಹೀಗಾಗಿ ಡಿಕೆಶಿ ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್ ಹತ್ತಲಿದ್ದಾರೆ.
ಬಳಿಕ ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಕುರಿತು ಸಿಎಂ ಸರ್ಕಾರಿ ನಿವಾಸ ಕಾವೇರಿ ಗೃಹ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಡಿಕೆ ಶಿವಕುಮಾರ್ ಇಂದು ರಾತ್ರಿ ತಮ್ಮ ಅಮೆರಿಕಾ ಪ್ರವಾಸದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ.
ಅಂದಹಾಗೆ ಈ ಬಾರಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇವರ ವಿರುದ್ಧ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಎರಡು ಪಕ್ಷಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, ಎರಡೂ ಪಕ್ಷಗಳು ಭಾರತೀಯ ಮತದಾರರನ್ನು ಓಲೈಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಒಂದು ವೇಳೆ ಚುನಾವಣೆಯಲ್ಲಿ ಕಮಲಾ ಗೆಲುವು ಸಾಧಿಸಿದರೆ ಭಾರತ ಮೂಲದ ಮಹಿಳೆ ಒಬ್ಬರು ವಿಶ್ವದ ಬಲಿಷ್ಠ ರಾಷ್ಟ್ರದ ಅಧ್ಯಕ್ಷರಾದ ಹಿರಿಮೆಗೆ ಪಾತ್ರರಾಗಲಿದ್ದಾರೆ.