Published
3 months agoon
By
Akkare Newsಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು ಗುರುವಾರ ನಿಧನರಾಗಿದ್ದಾರೆ.
ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಆದರೆ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಕೇವಲ BJP ಮಾತ್ರವಲ್ಲದೆ ಕಾಂಗ್ರೆಸ್ ಆಡಳಿತದಲ್ಲೂ ಶೇ 40ರ ಕಮಿಷನ್ ಮುಂದುವರಿದಿದೆ ಎಂದು ಕೆಂಪಣ್ಣ ಇದೇ ವರ್ಷ ಫೆಬ್ರವರಿಯಲ್ಲಿ ಆರೋಪಿಸಿದ್ದರು. ಕೆಂಪಣ್ಣ ಆರೋಪ ಪ್ರತಿಪಕ್ಷ ಬಿಜೆಪಿಗೆ ಅಸ್ತ್ರವಾಗಿದ್ದರೆ ಆಡಳಿತಾರೂಢ ಕಾಂಗ್ರೆಸ್ಗೆ ಇರಿಸುಮುರಿಸು ತಂದಿತ್ತು. ಗುತ್ತಿಗೆದಾರರ ಬಿಲ್ಗಳನ್ನು ಕ್ಲಿಯರ್ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಕೆಂಪಣ್ಣ ಆರೋಪಿಸಿದ್ದರು.
ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಸಂತಾಪ ಸೂಚಿಸಿದ್ದಾರೆ.