Published
3 months agoon
By
Akkare Newsಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಡಾ ಪ್ರಕರಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾದ ನಂತರ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದು, ಮುಖ್ಯಮಂತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವೆಲ್ಲರೂ ಅವರ ಬೆಂಬಲಕ್ಕೆ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.
“ನನಗೆ ಜವಬ್ದಾರಿ ಇದೆ ಮತ್ತು ತೀರ್ಪಿನ ಬಗ್ಗೆ ನನಗೆ ತಿಳಿಯಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರು ನನ್ನ ವಿರುದ್ಧ ಕೂಡಾ ಕೇಸ್ ಹಾಕಿದ್ದಾರೆ ಮತ್ತು ದೇವರ ದಯೆಯಿಂದ ನಾನು ಅದರಿಂದ ಹೊರಬಂದಿದ್ದೇನೆ. ಆ ಪ್ರಕರಣದಲ್ಲಿ ನಾನು ಜೈಲಿಗೆ ಕೂಡಾ ಹೋಗಿದ್ದೇನೆ. ಆದರೆ ಈಗ ಅದನ್ನು ರದ್ದುಗೊಳಿಸಲಾಗಿದೆ. ಸಿಎಂ ವಿರುದ್ಧ ಕೂಡಾ ದೊಡ್ಡ ಷಡ್ಯಂತ್ರವಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೂಡಾ ಆಗಿರುವ ಶಿವಕುಮಾರ್ ಹೇಳಿದ್ದಾರೆ.
“ಸಿದ್ದರಾಮಯ್ಯ ಅವರ ಕಾರ್ಯಕ್ರಮಗಳನ್ನು ಸಹಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯನ್ನು ವಿರೋಧಿಸುವ ದೇಶದ ಎಲ್ಲಾ ರಾಜಕಾರಣಿಗಳ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ನಾವು ಅವರ (ಸಿದ್ದರಾಮಯ್ಯ) ಜೊತೆಯಲ್ಲಿ ನಿಲ್ಲುತ್ತೇವೆ. ಅವರು ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದು ಡಿಕೆಶಿ ಹೇಳಿದ್ದಾರೆ.
ಆರೋಪ ಇನ್ನಷ್ಟೆ ಸಾಬೀತಾಗಬೇಕಿರುವುದರಿಂದ ಸಿಎಂ ಸಿದ್ದರಾಮಯ್ಯ ನಿರ್ದೋಷಿ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮುಂದಿನ ಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರ ಕಾನೂನಿಗೆ ವಿರುದ್ಧವಾಗಿದೆ ಎಂದು ಭಾವಿಸಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ತೀರ್ಪಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಹಿನ್ನಡೆ ಆಗಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಪೀಠವು ಮಂಗಳವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಎತ್ತಿಹಿಡಿದಿದೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಮಧ್ಯಂತರ ಪರಿಹಾರ ಕೋರಿದ್ದಲ್ಲದೆ, ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.