Published
3 weeks agoon
By
Akkare Newsಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ; ಕಾರ್ಯಕ್ರಮಗಳೆಲ್ಲ ರದ್ದು
ಪುತ್ತೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ನಿನ್ನೆ ಸಂಜೆಯಿಂದೀಚೆಗೆ ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ಹಲವು ಅನಾಹುತಗಳನ್ನೂ ಸೃಷ್ಟಿಸಿದೆ. ಸಿಡಿಲು ಬಡಿದು ಪುತ್ತೂರಿನ ಕೆಯ್ಯೂರು ಸಮೀಪ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿಯಾಗಿದೆ. ಮನೆ ಮಂದಿ ಅದೃಷ್ಟವಶಾತ್ ಪಾರಾಗಿದ್ದಾರೆ.
ಉಡುಪಿ ಜಿಲ್ಲೆಯ ಕೆಲವೆಡೆಗಳಲ್ಲಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿ ಜನರು ಸಮಸ್ಯೆ ಅನುಭವಿಸಿದ್ದಾರೆ. ನಿನ್ನೆ ರಾತ್ರಿಯಿಂದೀಚೆಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಡಿಸೆಂಬರ್ ತಿಂಗಳಲ್ಲಿ ಹೀಗೆ ಮಳೆಯಾಗುತ್ತಿರುವುದು ಅಪರೂಪದ ವಿದ್ಯಮಾನ ಎನ್ನಲಾಗಿದೆ.
ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಸೇರಿ ಹತ್ತು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ ಈ ಹತ್ತು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಸಾರಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಪರಿಣಾಮ ಆಗಲಿದೆ ಎಂಬ ಮುನ್ಸೂಚನೆ ಇದೆ.