Published
1 week agoon
By
Akkare Newsವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಹೌದು, ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಹೀಗಾಗಿ ಮೋದಿ ಅವರು ಈ ಆರೋಪ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಅಲ್ಲದೆ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ” ನಾ ಖಾವೂಂಗಾ, ನಾ ಖಾನೆ ದೂಂಗಾ” ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಲ್ಲದೆ ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಸಿಎಂ ಒತ್ತಾಯಿಸಿದ್ದಾರೆ.