Published
3 days agoon
By
Akkare Newsನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ನಮ್ಮ ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ” ಎಂದು ತಿಳಿಸಿದ್ದು, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
“ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ.
ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.