Published
2 days agoon
By
Akkare Newsಹಿರಿಯ ಸಾಹಿತಿ ಡಾ. ನಾ ಡಿಸೋಜಾ (87) ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು (ಜ.5) ರಾತ್ರಿ ನಿಧರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ನಾ ಡಿಸೋಜಾ ಅವರು, ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನಾಳೆ (ಜ.6, ಸೋಮವಾರ) ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಾ ಡಿಸೋಜಾ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಖ್ಯಾತ ಕಾದಂಬರಿ ಮತ್ತು ಕತೆಗಾರರಾಗಿದ್ದ ನಾ ಡಿಸೋಜಾ ಅವರು, 1964ರಲ್ಲಿ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟಿಸಿದರು. ನಂತರ ಮಂಜಿನ ಕಾನು, ಮುಳುಗಡೆ, ಕಾಡಿನ ಬೆಂಕಿ, ಈ ನೆಲ ಈಜಲ, ಕೆಂಪು ತ್ರಿಕೋನ, ನೆಲೆ, ಗಾಂಧಿ ಬಂದರು, ದ್ವೀಪ, ಜೀವಕಳೆ ಹೀಗೆ ಹಲವು ಕಾದಂಬರಿಗಳನ್ನು ಬರೆದಿದ್ದಾರೆ.
ಸಿಎಂ ಸಂತಾಪ
ನಾ ಡಿಸೋಜಾ ಅವರ ಅಗಲಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. “ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಹೇಳಿದ್ದಾರೆ.