Published
2 months agoon
By
Akkare Newsಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ (ಫೆ.07) ನಿರಾಕರಿಸಿದೆ.
ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಪ್ರಕರಣದ ಮೂಲ ದೂರದಾರ ಹಾಗೂ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಜ. 27ರಂದು ಪೂರ್ಣಗೊಳಿಸಿ ಕಾದಿರಿಸಿರುವ ತೀರ್ಪನ್ನು ಶುಕ್ರವಾರ (ಫೆ.07) ಬೆಳಗ್ಗೆ 10.30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿತು.
ಮುಡಾ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಹೇಳಿ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಇದೇ ನ್ಯಾಯಪೀಠ, ಇದೀಗ ಸಿಬಿಐ ತನಿಖೆಗೆ ನೀಡಲು ನಿರಾಕರಿಸಿ ಆದೇಶಿಸಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಎಂದು ಹೇಳಿರುವ ಹೈಕೋರ್ಟ್, ಅಲ್ಲದೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಸಿದ್ದರಾಮಯ್ಯ ಅವರ ಪತ್ನಿಗೆ ಮೈಸೂರಿನ ದೇವನೂರು ಬಡಾವಣೆ ಅಭಿವೃದ್ಧಿಗೆ ವಶಪಡಿಸಿಕೊಂಡಿದೆ ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ರೂ. ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ/ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿದಂತೆ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈಯಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ತನಿಖೆ/ಅಭಿಯೋಜನೆಗೆ ಅನುಮತಿ ನೀಡಿ ರಾಜ್ಯಪಾಲರು ಆ. 17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ. 19ರಂದು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿದ ಸೆ. 24ರಂದು ಹೈಕೋರ್ಟ್ ಆದೇಶಿಸಿತ್ತು.