Connect with us

ರಾಜಕೀಯ

ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಪ್ರಾರಂಭ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಕ್ಷಣಗಣನೆ

Published

on

ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ​ಗೆ ಇಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.


3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ವಿಚಾರಣೆ ಇಂದು (ಫೆಬ್ರವರಿ 17) ನಡೆದಿದ್ದು, ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಸ್ಪಷ್ಟಪಡಿಸಿದರು. ಈ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.

ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ​ಗೆ ನ್ಯಾಯಾಂಗ ನಿಂದನೆ‌ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡು ಹೈಕೋರ್ಟ್​, ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದರು.

 

ಬಳಿಕ ಇದಕ್ಕೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸ್ಪಷ್ಟಪಡಿಸಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು ಎಂದು ತಿಳಿಸಿದರು.

ನಿಗದಿತ ಅವಧಿಯೊಳಗೆ ಜಿ.ಪಂ ತಾ.ಪಂ ಚುನಾವಣೆಗಳನ್ನು ನಡೆಸುವಂತೆ ಅನುವು ಮಾಡಿಕೊಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಹಾಗೂ ನ್ಯಾ. ಎಂ.ಐ ಅರುಣ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

 

 

ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫ‌ಲವಾಗಿದ್ದು, ಆದಷ್ಟು ಬೇಗ ಮೀಸಲಾತಿ ಪಟ್ಟಿ ಕೊಟ್ಟು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಇನ್ನು ಈ ಸಂಬಂಧ ಭಾನುವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಾಗಿ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದರು. ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಸ್ಥಾನಗಳನ್ನು ನೀಡುವ ಗುರಿಯೊಂದಿಗೆ ಪಕ್ಷವು ಮೈತ್ರಿ ಮಾಡಿಕೊಳ್ಳುತ್ತಿದೆ ಮತ್ತು ಅಭ್ಯರ್ಥಿಗಳ ಪಟ್ಟಿಗಳನ್ನು ಅಂತಿಮಗೊಳಿಸುತ್ತಿದೆ ಎಂದು ತಿಳಿಸಿದ್ದರು.

ಇದರ ಬೆನ್ನಲ್ಲೇ ಇದೀಗ ಸರ್ಕಾರದ ಪರ ವಕೀಲರು ಮೇ ತಿಂಗಳ ನಂತರ ಚುನಾವಣೆ ನಡೆಸುವುದಾಗಿ ಹೇಳಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement