Connect with us

ಇತರ

ನಾಯಕತ್ವ ಬದಲಾವಣೆ; ಮುಂದಿನ ಚುನಾವಣೆ ಸಿದ್ದರಾಮಯ್ಯ ನಾಯಕತ್ವದಲ್ಲೇ: ಬಿಗ್‌ ಅಪ್‌ಡೇಟ್‌ ಕೊಟ್ಟ ಡಿ ಕೆ ಸುರೇಶ್‌

Published

on

ಬೆಂಗಳೂರು, ನವೆಂಬರ್‌ 05: ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು.


ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಕುರಿತು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಸುರೇಶ್ ಅವರು ಮಾತನಾಡಿ, ಇದೆಲ್ಲವೂ ಊಹಾಪೋಹ. ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳು ಪಕ್ಷದ ಮುಂದೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ವಯಸ್ಸಾಗಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ” ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ದೆಹಲಿ ಪ್ರವಾಸದ‌ ಕುರಿತು ಮಾತನಾಡಿ, ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ಗುರುವಾರ (ಡಿ.6) ವಿಚಾರಣೆ ನಡೆಯಲಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಿಶೇಷ ಪೀಠ ರಚಿಸಿರುವಂತೆ ಕಾಣಿಸುತ್ತದೆ. ಈ ವಿಚಾರಣೆ ವೇಳೆ ನಮ್ಮ ನಿಲುವು ಏನಿರಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಮತ್ತು ವಕೀಲರ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ ಎಂದರು. ವರಿಷ್ಠರೂ ದೆಹಲಿಯಲ್ಲಿರುವ ಕಾರಣ ಈ ಪ್ರವಾಸದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ವರಿಷ್ಠರು ದೆಹಲಿಯಲ್ಲಿ ಇರದೇ ಎಲ್ಲಿ ಹೋಗುತ್ತಾರೆ. ಬಿಹಾರ ಚುನಾವಣೆಗೂ ಇದಕ್ಕೂ ಸಂಬಂಧ ವಿಲ್ಲ. ಶಿವಕುಮಾರ್ ಅವರು ಈ ಹಿಂದಿನಿಂದಲೂ ದೆಹಲಿಗೆ ಹೋದಾಗೆಲ್ಲಾ ಕಾಂಗ್ರೆಸ್ ಕಚೇರಿಗೆ ಹೋಗುತ್ತಾರೆ, ವರಿಷ್ಠರು ಸಿಕ್ಕರೆ ಮಾತನಾಡುತ್ತಾರೆ, ಬರುತ್ತಾರೆ. ತುರ್ತಾಗಿ ಮೇಕೆದಾಟು ಪ್ರಕರಣ ವಿಚಾರಣೆಗೆ ಬಂದಿದೆ. ವಿಶೇಷ ಪೀಠ ರಚನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಈ ಪೀಠ ರಚನೆಯಿಂದ ಯಾವ ರೀತಿ ಲಾಭ ಆಗಲಿದೆ, ನಮ್ಮ ನಿಲುವು ಹೇಗಿರಬೇಕು ಎಂದು ಚರ್ಚೆ ಮಾಡಲು ತೆರಳಿದ್ದಾರೆ. ನಾಳೆ ಹೆಚ್ಚು ಕಮ್ಮಿ ಆದರೆ ಯಾಕೆ ಸರಿಯಾಗಿ ನಿಭಾಯಿಸಲಿಲ್ಲ ಎಂದು ನೀವುಗಳೇ ಪ್ರಶ್ನೆ ಮಾಡುತ್ತೀರಿ. ಇದು ರಾಜಕೀಯ ಕೆಲಸ ಅಲ್ಲ. ಕರ್ನಾಟಕ ರಾಜ್ಯದ ಹಿತ ಕಾಪಾಡುವ ಕೆಲಸ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಪರ್ಯಾಯ ನಾಯಕರು ಇಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ನಾಯಕರೂ ಸೇರಿ ಕಾಂಗ್ರೆಸ್ ಪಕ್ಷವಾಗಿದೆ. ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಪಕ್ಷವಿಲ್ಲ. ಎಂ.ಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಎಲ್ಲಾ ಸಮುದಾದ ನಾಯಕರು ಸೇರಿ ಪಕ್ಷ ಕಟ್ಟಿಕೊಂಡು ಬಂದಿದ್ದೇವೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version