Published
2 weeks agoon
By
Akkare News
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಒಟ್ಟು 29,397 ಎಸೆಸೆಲ್ಸಿ ವಿದ್ಯಾರ್ಥಿಗಳು ಹಾಗೂ 37,337 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ತಿಳಿಸಿದ್ದಾರೆ. ಜಿಲ್ಲೆಯ 524 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ 91 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ವ್ಯವಸ್ಥಿತವಾಗಿ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕಳೆದ ವರ್ಷದಂತೆ ಈ ಬಾರಿಯೂ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಜಿಲ್ಲಾ ಮತ್ತು ರಾಜ್ಯ ಹಂತದಲ್ಲಿ ಇದರ ವೀಕ್ಷಣೆ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿಶೇಷವಾಗಿ ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಹಾಗೂ ಮಂಡಳಿಯ ನಿಯಮದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನೂ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಪರೀಕ್ಷಾ ಸಂದರ್ಭದಲ್ಲಿ ಉಂಟಾಗುವ ಆತಂಕ ಮತ್ತು ಖಿನ್ನತೆಯನ್ನು ಹೋಗಲಾಡಿಸಲು ‘ಟೆಲಿ ಮಾನಸ’ ಸಹಾಯವಾಣಿ (14416) ಸಕ್ರಿಯಗೊಳಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ತಜ್ಞ ವೈದ್ಯರ ಮೂಲಕ ಕೌನ್ಸಲಿಂಗ್ ನೀಡಲು ಪ್ರತ್ಯೇಕ ಸಹಾಯವಾಣಿ ತೆರೆಯಲಾಗುತ್ತಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಗಾಗಿ 59 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಪ್ರಶ್ನೆ ಪತ್ರಿಕೆಗಳ ರಕ್ಷಣೆ ಮತ್ತು ಸಾಗಾಟಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಹರಿಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಜಿಲ್ಲೆಯ ಪಿಯುಸಿ ವಿಭಾಗದಲ್ಲಿ ವಿಜ್ಞಾನ ವಿಭಾಗದಿಂದ 18,559, ವಾಣಿಜ್ಯ ವಿಭಾಗದಿಂದ 15,054 ಹಾಗೂ ಕಲಾ ವಿಭಾಗದಿಂದ 3,724 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಸಿಬ್ಬಂದಿಗಳ ಹಾಜರಾತಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಉಪಸ್ಥಿತರಿದ್ದರು.






