Published
2 months agoon
By
Akkare News
ನಾಗರಕರ್ನೂಲ್: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಪ್ರಥಮ ಪಿಯುಸಿ (ಇಂಟರ್ ಮೀಡಿಯಟ್) ಪರೀಕ್ಷೆ ಬರೆದ ಕೆಲವೇ ಗಂಟೆಗಳಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾರ್ವಜನಿಕ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಗೆ, ಸೋಮವಾರ ಪರೀಕ್ಷೆ ಮುಗಿಸಿ ಹೊರಬಂದ ನಂತರ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಈ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯು ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ತಕ್ಷಣ ಆಕೆಯ ತಾಯಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಸ್ಕ್ಯಾನಿಂಗ್ ಮಾಡಿಸುವಂತೆ ಸೂಚಿಸಿ ಹತ್ತಿರದ ಡಯಾಗ್ನೋಸ್ಟಿಕ್ ಸೆಂಟರ್‌ಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿ ಸ್ಕ್ಯಾನಿಂಗ್‌ಗಾಗಿ ಸರತಿಯ ಸಾಲಿನಲ್ಲಿ ಕಾಯುತ್ತಿದ್ದಾಗ ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಶೌಚಾಲಯಕ್ಕೆ ತೆರಳಿದ್ದು, ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಶೌಚಾಲಯದೊಳಗೆ ಮಗುವಿನ ಅಳುವಿನ ಶಬ್ದ ಕೇಳಿ ಸಿಬ್ಬಂದಿ ಧಾವಿಸಿದಾಗ ವಿಷಯ ತಿಳಿದುಬಂದಿದೆ. ಆರಂಭಿಕ ವರದಿಗಳ ಪ್ರಕಾರ, ಬಾಲಕಿ ಮತ್ತು ಆಕೆಯ ತಾಯಿ ಮಗುವನ್ನು ಶೌಚಾಲಯದ ಕಸದ ಬುಟ್ಟಿಯಲ್ಲಿ ಬಿಟ್ಟು ಬರಲು ಯತ್ನಿಸಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿನಿ ಮತ್ತು ನವಜಾತ ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿಯು ಅಪ್ರಾಪ್ತ ವಯಸ್ಕಳಾಗಿರುವುದರಿಂದ ಆಕೆ ಗರ್ಭಿಣಿಯಾಗಲು ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ.
ಇದೇ ರೀತಿಯ ಮತ್ತೊಂದು ಘಟನೆ ಕಳೆದ ತಿಂಗಳು ಮಧ್ಯಪ್ರದೇಶದ ಧಾರವಾಡದಲ್ಲಿ ನಡೆದಿತ್ತು. ಅಲ್ಲಿ 10ನೇ ತರಗತಿಯ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೋರ್ಡ್ ಪರೀಕ್ಷೆ ಬರೆಯುತ್ತಿದ್ದಾಗ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು.
ನೃತ್ಯ ಕಾರ್ಯಕ್ರಮವೊಂದರಲ್ಲಿ ಪರಿಚಯವಾದ ಯುವಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದರಿಂದ ತಾನು ಗರ್ಭಿಣಿಯಾದ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ ಎಂದು ಆ ವಿದ್ಯಾರ್ಥಿನಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಳು. ಸತತವಾಗಿ ನಡೆಯುತ್ತಿರುವ ಇಂತಹ ಘಟನೆಗಳು ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಜಾಗೃತಿಯ ಬಗ್ಗೆ ಆತಂಕ ಮೂಡಿಸಿವೆ.