Published
1 month agoon
By
Akkare News
ಶಿವಮೊಗ್ಗ: ಇಲ್ಲಿನ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ದುರ್ದೈವಿ.
ಗುರುವಾರ ರಾತ್ರಿ ಸುಮಾರು 11:45ರ ಸಮಯದಲ್ಲಿ ಈ ಅನಿರೀಕ್ಷಿತ ದುರಂತ ಸಂಭವಿಸಿದೆ. ಮೃಗಾಲಯದ ಆಸ್ಪತ್ರೆಯಲ್ಲಿದ್ದ ‘ಸನ್ ಕಾನರ್’ ಹಕ್ಕಿಗೆ ಚಿಕಿತ್ಸೆ ನೀಡಲು ತೆರಳಿದ್ದ ಡಾ. ಸಮೀಕ್ಷಾ, ಇದೇ ವೇಳೆ ಅಲ್ಲಿದ್ದ ಗರ್ಭಿಣಿ ನೀರಾನೆಯ ಆರೋಗ್ಯ ತಪಾಸಣೆಗೆ ಮುಂದಾಗಿದ್ದರು ಎನ್ನಲಾಗಿದೆ.
ಥರ್ಮಲ್ ಕ್ಯಾಮೆರಾ ಮೂಲಕ ನೀರಾನೆಯ ದೇಹದ ಉಷ್ಣತೆಯನ್ನು ಪರೀಕ್ಷಿಸಲು ಅವರು ಅದರ ಆವರಣದೊಳಗೆ ಹೋದಾಗ, ಏಕಾಏಕಿ ಕೆರಳಿದ ನೀರಾನೆ ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದೆ.
ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಸಮೀಕ್ಷಾ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿದರಾದರೂ, ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ವೈದ್ಯೆ ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು.
ಸಚಿವ ಈಶ್ವರ ಖಂಡ್ರೆ ಸಂತಾಪ ಮತ್ತು ತನಿಖೆಗೆ ಆದೇಶ:
ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮೃತ ಪಶುವೈದ್ಯೆಯ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಅಲ್ಲದೆ ಮೃತರ ಕುಟುಂಬಕ್ಕೆ ತಕ್ಷಣವೇ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
SOP ಪಾಲನೆ: ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಕಟ್ಟುನಿಟ್ಟಾಗಿ ‘ಪ್ರಮಾಣಿತ ಕಾರ್ಯಾಚರಣೆ ವಿಧಾನ’ (SOP) ಪಾಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಉನ್ನತ ಮಟ್ಟದ ತನಿಖೆ: ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡುವಂತೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡಕ್ಕೆ ಆದೇಶಿಸಿದ್ದಾರೆ.
ಮೃಗಾಲಯದಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿದ್ದು, ತನಿಖಾ ವರದಿಯ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಬೇಕಿದೆ.