Connect with us

ಸ್ಥಳೀಯ

ಬೆಂಗಳೂರು ಭಾಷಣದ ಬಗ್ಗೆ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Published

on

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ಮಾಡಿರುವ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ, ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ, ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯ ಭರಿತ ಆಕ್ರೋಶವಾಗಿ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ ಇತ್ತು. ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತುಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು.

ಪಂಡಿತ್ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ, ಅಟಲ್‌ ಬಿಹಾರಿ ವಾಜಪೇಯಿಯವರೂ ಸೇರಿದಂತೆ ದೇಶದ ಪ್ರಧಾನಮಂತ್ರಿಯಾದವರು ಎಂದೂ ಕೆಟ್ಟ ರಾಜಕಾರಣಿಗಳ ರೀತಿ ಬೀದಿ ಭಾಷಣ ಮಾಡಿ ವಿರೋಧ ಪಕ್ಷಗಳನ್ನು ಹಳಿಯಲು ಹೋಗಿಲ್ಲ. ಅವರೆಲ್ಲರೂ ಕಾಪಾಡಿಕೊಂಡು ಬಂದಿದ್ದ ಪ್ರಧಾನಿ ಕುರ್ಚಿಯ ಘನತೆ, ಗಾಂಭಿರ್ಯ ಮತ್ತು ಔಚಿತ್ಯವನ್ನು ನರೇಂದ್ರ ಮೋದಿಯವರು ತಮ್ಮ ಸುಳ್ಳು, ಕೀಳು ಅಭಿರುಚಿ ಮತ್ತು ದ್ವೇಷಾಸೂಯೆಗಳನ್ನು ವ್ಯಕ್ತಪಡಿಸುವ ಭಾಷಣಗಳ ಮೂಲಕ ಮಣ್ಣುಪಾಲು ಮಾಡುತ್ತಿದ್ದಾರೆ. ಬೆಂಗಳೂರಿಗೆ ಬಂದಿದ್ದ ಮೋದಿಯವರು ಇನ್ನೂ ಪಂಚ ರಾಜ್ಯಗಳ ಚುನಾವಣಾ ರ‌್ಯಾಲಿಯಗಳ ಗುಂಗಿನಲ್ಲಿಯೇ ಇದ್ದಂತೆ ಕಂಡರು.

2024-25ರಲ್ಲಿಯೇ ಭಾರತವನ್ನು 5 ತ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶ ಮಾಡುವೆ ಎಂದು ಕೊಚ್ಚಿಕೊಂಡಿದ್ದ, ಭಾರತದ ಅಭಿವೃದ್ದಿ ರಥ ನಾಗಾಲೋಟದಿಂದ ಮುಂದೋಡುತ್ತಿದೆ ಎಂದು ಬೀಗಿದ್ದ ಮತ್ತು ದೇಶದ ಬಡತನವನ್ನು ನಿರ್ಮೂಲನೆ ಮಾಡಿ ಆಗಿದೆ ಎಂದು ತನ್ನ ಬೆನ್ನನ್ನು ತಾನೇ ಚಪ್ಪರಿಸಿಕೊಂಡಿದ್ದ ಪ್ರಧಾನಿಯವರು ಈಗ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಮತ್ತು ಖಾದ್ಯ ಎಣ್ಣೆ ಕಡಿಮೆ ಬಳಸಿ, ವಿದೇಶ ಪ್ರವಾಸ ಮಾಡಬೇಡಿ ಮತ್ತು ಗೊಬ್ಬರ ಬಳಕೆ ತಗ್ಗಿಸಿ ಎಂದು ಬೇಡಿಕೊಳ್ಳುತ್ತಿರುವುದು ಯಾವ ಅಭಿವೃದ್ದಿಯ ಲಕ್ಷಣ ಎನ್ನುವುದನ್ನು ಮೋದಿಯವರೇ ಸ್ಪಷ್ಟಪಡಿಸಬೇಕು.

Continue Reading
Click to comment

Leave a Reply

Your email address will not be published. Required fields are marked *

Advertisement