Published
15 hours agoon
By
Akkare News
ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಪ್ರಯಾಣಿಸುವ ಜನತೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಹೊಸ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಸೇವೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ಅವರು ಘೋಷಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಬಳಿ ರೈಲು ನಿಲ್ದಾಣ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಹೊಸ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಬಗ್ಗೆ ಕಾರ್ಯಸಾಧ್ಯತಾ ಅಧ್ಯಯನ ನಡೆಯುತ್ತಿದೆ ಎಂದು ಸೋಮಣ್ಣ ತಿಳಿಸಿದರು. ಮಂಗಳೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು ಪ್ರಯಾಣಿಕರಿಗೆ ಅತ್ಯಂತ ಅನುಕೂಲಕರವಾಗಿದ್ದು, ಸಾರ್ವಜನಿಕರ ಬೇಡಿಕೆಯ ಮೇರೆಗೆ ಇದನ್ನು ‘ಮೆಮು’ (MEMU) ಸೇವೆಯಾಗಿ ಪರಿವರ್ತಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ.
ಮಂಗಳೂರು ಜಂಕ್ಷನ್ ನವೀಕರಣ
ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು 38 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದ್ದು, ಈ ನವೀಕೃತ ನಿಲ್ದಾಣವನ್ನು ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಗುವುದು. 40 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಜಂಕ್ಷನ್ ಯಾರ್ಡ್ ಅನ್ನು ಹೆಚ್ಚುವರಿ ಸರಕು ಸಾಗಣೆ ಟ್ರ್ಯಾಕ್ನೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ ಈಗಾಗಲೇ ಭೂಮಿ ವಶಪಡಿಸಿಕೊಳ್ಳಲಾಗಿದ್ದು, ಮಾರ್ಚ್ 2027ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದರ ಜೊತೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು. 



