Published
3 hours agoon
By
Akkare News
ಉಡುಪಿ: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.
ನಗರದ ಡಯಾನ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಸೆಲ್ ದರದಲ್ಲಿ ನಿರಂತರ ಏರಿಕೆ, ವಾಹನಗಳ ನಿರ್ವಹಣಾ ವೆಚ್ಚ, ಬಿಡಿಭಾಗಗಳ ಬೆಲೆ ಹಾಗೂ ನೌಕರರ ವೇತನ ಹೆಚ್ಚಳದಿಂದಾಗಿ ಬಸ್ ಉದ್ಯಮವು ಆರ್ಥಿಕ ಒತ್ತಡಕ್ಕೆ ಸಿಲುಕಿದೆ. ಹೀಗಾಗಿ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಹೇಳಿದರು.
ನೌಕರರ ವೇತನ, ವಿಮೆ, ರಸ್ತೆ ತೆರಿಗೆ ಹಾಗೂ ಇತರ ಕಡ್ಡಾಯ ಶುಲ್ಕಗಳ ಹೆಚ್ಚಳದಿಂದ ಬಸ್ ಮಾಲಕರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ 2020ರ ಅಧಿಸೂಚನೆ ಅನ್ವಯ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದೆ ಎಂದು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಪ್ರಯಾಣ ದರ ರಿಯಾಯಿತಿ ಎಂದಿನಂತೆ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಯಾಣ ದರ ಪರಿಷ್ಕರಣೆ ಕುರಿತಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರ ಅನ್ವಯವೇ ದರ ಹೆಚ್ಚಳಕ್ಕೆ ಅನುಮೋದನೆ ದೊರೆತಿದೆ ಎಂದರು.




