Published
2 hours agoon
By
Akkare News
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. 
ಈ ಬಗ್ಗೆ ಮಾತನಾಡಿರುವ ಉದಯ್ ಶೆಟ್ಟಿ ಅವರು, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ “ತುಳು ಅಭಿವೃದ್ಧಿ ಪ್ರಾಧಿಕಾರ”ವನ್ನು ಶೀಘ್ರವಾಗಿ ಸ್ಥಾಪಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ. ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆಯು ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗವಾಗಿದೆ. ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು. 
ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನಕ್ಕೆ ಬೇಡಿಕೆ ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ತುಳು ಭವನ ನಿರ್ಮಾಣ ಮಾಡುವ ಕುರಿತು ಮನವಿ ಮಾಡಿಕೊಂಡಿದ್ದು, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸುಸಜ್ಜಿತ ತುಳು ಭವನ ನಿರ್ಮಾಣ ಅಗತ್ಯವಾಗಿದೆ. ಕಾರ್ಕಳವು ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಅಧ್ಯಯನ ಮತ್ತು ಪ್ರಚಾರಕ್ಕಾಗಿ ಕಾರ್ಕಳದಲ್ಲಿ ತುಳು ಭವನದ ಅಗತ್ಯವಿದೆ. 




