ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆ.03 ಸೋಮವಾರ ಜಿಲ್ಲೆಯ ಮಂಗಳೂರು ಉಪವಿಭಾಗದ ಶಾಲೆಗಳಿಗೆ ಮತ್ತು ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 10 ನೇ ತರಗತಿಯವರೆಗೆ ರಜೆ ಪ್ರಕಟಿಸಲಾಗಿದೆ. ಈ ಆದೇಶವು ಎಲ್ಲಾ ವಸತಿ ಶಾಲೆಗಳಿಗೂ ಕಡ್ಡಾಯವಾಗಿ ಅನ್ವಯವಾಗಲಿದೆ. ಅದೇ ರೀತಿ ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ (ಪಿಯುಸಿ) ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ 12 ನೇ ತರಗತಿಯವರೆಗೆ ರಜೆ ನೀಡಲಾಗಿದೆ. ಈ ಉಪವಿಭಾಗದ ಎಲ್ಲಾ ವಸತಿ ಶಾಲಾ-ಕಾಲೇಜುಗಳಿಗೂ ಸಹ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
2.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
3.ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
4. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
5. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.