Published
2 hours agoon
By
Akkare News
ಶ್ರಾವಣ ಮಾಸದ ಮೊದಲನೇ ಹಬ್ಬವಾದ ನಾಗರ ಪಂಚಮಿಯನ್ನು ರಾಜ್ಯಾದ್ಯಂತ ಇಂದು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಾಗರ ಪಂಚಮಿ ಹಿಂದೂ ಧರ್ಮದ ಪ್ರಮುಖ ಪವಿತ್ರ ಹಬ್ಬಗಳಲ್ಲಿ ಒಂದಾಗಿದ್ದು, ಈ ದಿನ ನಾಗದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಜೊತೆಗೆ ಸಹೋದರ-ಸಹೋದರಿಯರ ಬಾಂಧವ್ಯವನ್ನು ಬೆಸೆಯುವ ಹಬ್ಬವಾಗಿಯೂ ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ.
ದೇಶದ ವಿವಿಧ ರಾಜ್ಯಗಳಲ್ಲಿ ನಾಗರ ಪಂಚಮಿಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ. ರಾಜ್ಯದಲ್ಲಿ ನಾಗರಕಲ್ಲು, ಹುತ್ತ ಹಾಗೂ ಮನೆಗಳಲ್ಲಿರುವ ನಾಗವಿಗ್ರಹಗಳಿಗೆ ತನಿ ಎರೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಆಚರಿಸಲಾಯಿತು.
ಭಕ್ತರು ಮುಂಜಾನೆಯೇ ಮಡಿಯೊಂದಿಗೆ ಪೂಜಾ ಸಾಮಗ್ರಿಗಳನ್ನು ಸಿದ್ಧಪಡಿಸಿ, ಒಲೆಯನ್ನು ಹಚ್ಚದೆ ನಾಗರಕಲ್ಲು, ಮಣ್ಣಿನ ನಾಗಪ್ರತಿಮೆ ಹಾಗೂ ಹುತ್ತಗಳಿಗೆ ಹಾಲು ಹಾಗೂ ತನಿ ಎರೆದು ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ರಕ್ಷಣೆ ದೊರೆಯಲಿ ಎಂದು ಪ್ರಾರ್ಥಿಸಿದರು.
ನಾಗರ ಪಂಚಮಿ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು. ದೇವಾಲಯದ ಆವರಣದಲ್ಲಿರುವ ನೂರಾರು ನಾಗರಕಲ್ಲುಗಳಿಗೆ ತನಿ ಎರೆದು ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು.
ಸುಬ್ರಹ್ಮಣ್ಯ ಸ್ವಾಮಿಗೆ ಅಡಕೆ ಹೊಂಬಾಳೆ, ಕಮಲ, ಕನಕಾಂಬರ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮುಂಜಾನೆಯಿಂದಲೇ ಸುಬ್ರಹ್ಮಣ್ಯ ಸ್ವಾಮಿಗೆ ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.ನಿನ್ನೆಯೇ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ಇಂದು ಬೆಳಿಗ್ಗೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.



