Connect with us

ಚುನಾವಣೆ

ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರ ಸಜ್ಜು: ವರ್ಷಾಂತ್ಯದೊಳಗೆ ತಾಪಂ, ಜಿಪಂ, ಗ್ರಾಪಂ ಎಲೆಕ್ಷನ್

Published

on

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ನಿಯಮ 72ರ ಅಡಿಯಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತಾಪಿಸಿದ ಗಮನಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ಪಂಚಾಯಿತಿ ಚುನಾವಣೆಗಳ ಕುರಿತು ಸರ್ಕಾರದ ಸಿದ್ಧತೆಗಳನ್ನು ವಿವರಿಸಿದರು. ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಸ್ತುತ ಪ್ರಗತಿಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಲಾಗುವುದು. ನಂತರ ಚುನಾವಣಾ ಆಯೋಗದ ಪ್ರಕ್ರಿಯೆಯಂತೆ ಬಹುತೇಕ ಈ ವರ್ಷದ ಅಂತ್ಯದ ವೇಳೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಉದ್ದೇಶಿಸಿದೆ ಎಂದು ಅವರು ತಿಳಿಸಿದರು. ಅವಧಿ ಮುಗಿದ ಗ್ರಾಪಂಗಳಿಗೂ ಚುನಾವಣೆ ಇದೇ ವೇಳೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾವಣೆಯ ಬಗ್ಗೆಯೂ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾಡಳಿತಗಳು ತಮ್ಮ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿದ ಬಳಿಕ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ತಾಲೂಕು, ಜಿಲ್ಲಾ ಹಾಗೂ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾವಣಾ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ, ಈ ವರ್ಷದ ಅಂತ್ಯದೊಳಗೆ ಚುನಾವಣೆಗಳನ್ನು ನಡೆಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

 
 

Continue Reading
Click to comment

Leave a Reply

Your email address will not be published. Required fields are marked *

Advertisement