ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನವೆಂಬರ್ 2ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಮಳೆಯ (Rain) ವಾತಾವರಣ ನಿರ್ಮಾಣವಾಗಿದೆ. ನವೆಂಬರ್ 2 ರಿಂದ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಬೆಂಗಳೂರಿನಲ್ಲೂ ನವೆಂಬರ್ 2 ರಿಂದ ಮಳೆ ಆರಂಭವಾಗಲಿದೆ.
ಜಿಲ್ಲಾವಾರು ಮಳೆಯ ಮುನ್ಸೂಚನೆಯ ವಿವರ
ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 3, 4 ಮತ್ತು 5 ರಂದು ಭಾರೀ ಮಳೆ
ಇಂದು ಮುಂಜಾನೆ ಕರಾವಳಿ ತೀರದಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಿದೆ. ಸಂಜೆಯ ಒಳಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ದಕ್ಷಿಣ ಭಾಗಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ 1 ಮತ್ತು 2 ರಂದು ಸಾಧಾರಣ ಮಳೆಯಾಗಲಿದ್ದು, ನವೆಂಬರ್ 3, 4 ಮತ್ತು 5 ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ (Heavy Rain) ಸುರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 2 ರಿಂದ 5 ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ನವೆಂಬರ್ 2 ಮತ್ತು 3 ರಂದು ಗಾಳಿಯೊಂದಿಗೆ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಕಲಬುರಗಿ, ಯಾದಗಿರಿ, ರಾಯಚೂರು, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ನವೆಂಬರ್ 3 ಮತ್ತು 4 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನವೆಂಬರ್ 1 ರಿಂದ 3 ರವರೆಗೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು: ನವೆಂಬರ್ 2 ರಿಂದ ನವೆಂಬರ್ 7ರ ವರೆಗೆ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.
• ಬೆಂಗಳೂರು ಹವಾಮಾನ: ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಒಣ ಹವೆ ಇರಲಿದ್ದು, ಮುಂಜಾನೆ ಮಂಜು ಇರಲಿದೆ. ನವೆಂಬರ್ 2 ರಿಂದ ಮೋಡಕವಿದ ವಾತಾವರಣದೊಂದಿಗೆ ಮಳೆ ಆರಂಭವಾಗುವ ನಿರೀಕ್ಷೆಯಿದೆ.
• ಯಲ್ಲೋ ಅಲರ್ಟ್: ಮುಂಬರುವ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 14 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.