ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಮೂಲಕ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮವನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಸ್ವಾಗತಿಸುತ್ತದೆ. ನ್ಯಾಯದ ನಿರೀಕ್ಷೆಯಲ್ಲಿ ನಡೆದ ಹೋರಾಟಕ್ಕೆ ಸ್ಪಂದಿಸಿ ಈ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ನಡೆದ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ ನಿಂತ ಎಲ್ಲಾ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಮಾಜದ ನಾಯಕರು, ಸಾರ್ವಜನಿಕರು, ಮಾಧ್ಯಮ ಮಿತ್ರರು ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತೇವೆ. ಹೋರಾಟದ ಪ್ರತಿಯೊಂದು ಹಂತದಲ್ಲೂ ನಮ್ಮ ಬೆನ್ನೆಲುಬಾಗಿ ನಿಂತ ಸರ್ವರ ಸಹಕಾರ ಮತ್ತು ಒಗ್ಗಟ್ಟು ನಮಗೆ ಮತ್ತಷ್ಟು ಶಕ್ತಿ ತುಂಬಿದೆ. ಆದರೆ, ನಮ್ಮ ಹೋರಾಟ ಇಲ್ಲಿಗೆ ಅಂತ್ಯಗೊಂಡಿಲ್ಲ. ಪ್ರದೀಪ್ ಪೂಜಾರಿ ಸಾವಿಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಪುನೀತ್ ಅವರನ್ನು ಅಮಾನತುಗೊಳಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ. ಅಲ್ಲದೆ, ಪ್ರದೀಪ್ ಪೂಜಾರಿ ವಿರುದ್ಧ ದಾಖಲಿಸಲಾಗಿದ್ದ ಅತ್ಯಾಚಾರ ಪ್ರಕರಣದ ಸತ್ಯಾಸತ್ಯತೆ, ಅದರ ಹಿಂದಿರುವ ವಿಚಾರಗಳು ಹಾಗೂ ಅವರನ್ನು ಮಾನಸಿಕವಾಗಿ ಕುಗ್ಗಿಸಿ ಆತ್ಮಹತ್ಯೆಗೆ ಪ್ರೇರೇಪಿಸಲಾಗಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ.
ಸಿಐಡಿ ತನಿಖೆಯು ಯಾವುದೇ ಒತ್ತಡ, ಪ್ರಭಾವಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಪರಿಶೀಲಿಸಿ ಸತ್ಯವನ್ನು ಹೊರತಂದು ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿಲ್ಲದು. ಅನ್ಯಾಯದ ವಿರುದ್ಧದ ನಮ್ಮ ಧ್ವನಿ ನಿರಂತರವಾಗಿರುತ್ತದೆ. ಈ ನ್ಯಾಯದ ಹೋರಾಟಕ್ಕೆ ಕೈಜೋಡಿಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಪ್ರವೀಣ್ ಎಂ. ಪೂಜಾರಿ ಅಧ್ಯಕ್ಷರು, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ.