ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ ಮುಂದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಮಾತುಗಳನ್ನಾಡಿರುವುದು ಸರಿಯಲ್ಲ. ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದ ಗುಡುಗಿದ್ದಾರೆ. ಬೆಳ್ತಂಗಡಿ ಶಾಸಕರಾಗಿರುವ ಹರೀಶ್ ಪೂಂಜಾ ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯ(KPS) ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಲ್ಲದೆ, ದ್ವೇಷದ ಭಾಷಣ ಮಾಡಿದ್ದರು. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಶಿಕ್ಷಣ ಸಚಿವನಾಗಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರು ಕ್ಷಮೆ ಕೇಳುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ. ಕಾನೂನು ಪ್ರಕಾರ ಕೈಗೊಳ್ಳಬೇಕಾದ ಕ್ರಮವನ್ನು ಖಂಡಿತ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಶಾಲೆಗಳು ದೇವಸ್ಥಾನಗಳಿದ್ದಂತೆ. ಅಂತಹ ಪವಿತ್ರ ಸ್ಥಳದಲ್ಲಿ ರಾಜಕೀಯ ಮಾತನಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.