Published
7 months agoon
By
Akkare Newsಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್‌ನ ಆರು ಸಚಿವರ ಮಕ್ಕಳ ಪೈಕಿ ಮೂವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿದ್ದಾರೆ.
ಬೀದರ್ ಕ್ಷೇತ್ರದಲ್ಲಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರು ಗೆಲುವು ಸಾಧಿಸಿದ್ದು, ರಾಜ್ಯದ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಬಿಜೆಪಿಯ ಭಗವಂತ ಖೂಬಾ ಸೋಲು ಅನುಭವಿಸಿದ್ದಾರೆ.
ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಚಿವ ಹೆಚ್.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಗೆಲುವು ಸಾಧಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ಸೋಲು ಕಂಡಿದ್ದಾರೆ.
ಬಾಗಲಕೋಟೆ ಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಸೋಲು ಅನುಭವಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪಿಸಿ ಗದ್ದಿಗೌಡರ್ ಮತ್ತೆ ಗೆಲುವಿನ ನಗೆ ಬೀರಿದ್ದಾರೆ.
ಬೆಳಗಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ. ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಲ್ಲಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ದಕ್ಷಿಣ ಕೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎರಡನೇ ಅವಧಿಗೆ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸೌಮ್ಯ ರೆಡ್ಡಿ ಅಲ್ಪ ಮತಗಳಿಂದ ಸೋಲು ಕಂಡಿದ್ದರು.