Published
7 months agoon
By
Akkare News2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಇಂದು ಷರತ್ತುಬದ್ದ ಜಾಮೀನು ನೀಡಿದೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್ ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿತ್ತು. ಹೀಗಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಜೂನ್ 1ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.
ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಬೆಂಗಳೂರಿನ 42 ನೇ ಎಸಿಎಂಎಂ ಪ್ರಕರಣದಲ್ಲಿ ಖುದ್ದು ಹಾಜರಾಗಲುಬ ಸಮನ್ಸ್ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಈ ವೇಳೆ ರಾಹುಲ್ ಪರ ವಕೀಲರ ಜಾಮೀನು ನೀಡುವಂತೆ ಮನವಿ ಮಾಡಿದರು. ಇದನ್ನ ಮಾನ್ಯ ಮಾಡಿದ ನ್ಯಾಯಾಧೀಶರು ಷರತ್ತುಬದ್ದ ಜಾಮೀನು ನೀಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಮಾಜಿ ಸಂಸದ ಡಿಕೆ ಸುರೇಶ್ ಶ್ಯೂರಿಟಿ ನೀಡಿದ್ದಾರೆ; ಅದನ್ನು ಪುರಸ್ಕಿಸಿದ ನ್ಯಾಯಾಲಯ ಜಾಮೀನು ನೀಡಿ ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.
ಈ ಹಿಂದೆ ವಿಚಾರಣೆಗೆ ಎರಡು ಬಾರಿ ವಿನಾಯಿತಿ ನೀಡಲಾಗಿದ್ದು, ಮೂರನೇ ಬಾರಿ ಖುದ್ದು ಹಾಜರಾಗಲು ಸೂಚನೆ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನು ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು.
ರಾಹುಲ್ ಗಾಂಧಿ ಜೂನ್ 1ರಂದು ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಜೂನ್ 7ರೊಳಗೆ ಹಾಜರಾಗಬೇಕೆಂದು ಆದೇಶಿಸಿತ್ತು.
ಈ ಹಿನ್ನೆಲೆ, ಇಂದು ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬರಮಾಡಿಕೊಂಡಿದ್ದಾರೆ.
ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿಯಾದರೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಕ್ರಮವಾಗಿ 2,3 ಮತ್ತು 4ನೇ ಆರೋಪಿಗಳಾಗಿದ್ದಾರೆ.