Published
2 months agoon
By
Akkare Newsಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು(ಅ.23) ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದು, ಈ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿ.ಪಿ.ಯೋಗೇಶ್ವರ್ ಅವರಿಗೆ ಪಕ್ಷದ ಬಾವುಟ, ಶಾಲು ಹಾಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್ ಅವರು, “ನಮ್ಮ ಜಿಲ್ಲೆಯ ಪ್ರಮುಖ ನಾಯಕರಾದ ಯೋಗೇಶ್ವರ್ ಜೊತೆ ಅನೇಕ ವಿಚಾರಗಳನ್ನು ಚರ್ಚಿಸಿದೆವು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ವರಿಷ್ಠರ ಅನುಮತಿ ಪಡೆದು ಯೋಗೇಶ್ವರ್ ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ” ಎಂದರು.
ಬಳಿಕ ಮಾತನಾಡಿದ ಸಿ.ಪಿ.ಯೋಗೇಶ್ವರ್ ಅವರು, ” ಸ್ವಯಂ ಪ್ರೇರಿತನಾಗಿ ಯಾವುದೇ ಒತ್ತಡ, ಷರತ್ತುಗಳಿಲ್ಲದೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ನಾನು ನೇರವಾಗಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬಂದು ಚರ್ಚಿಸಿ, ಸಿಎಂ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಮಲ್ಲಿಕಾರ್ಜುನ್ ಖರ್ಗೆ ಅವರೂ ಮಾತನಾಡಿ ಹಾರೈಸಿದ್ದಾರೆ. ನನ್ನ ರಾಜಕೀಯ ಜೀವನ ಶುರು ಮಾಡಿದ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗುತ್ತಿದ್ದೇನೆ. ಕಾಂಗ್ರೆಸ್ ಬಂದ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಇದರಲ್ಲಿ ನಾನೂ
ಕೈಜೋಡಿಸುವ ದೃಷ್ಠಿಯಿಂದ ಬಂದಿದ್ದೇನೆ” ಎಂದು ಹೇಳಿದರು.
ಈ ಸಂದರ್ಭ ಸಚಿವರಾದ ರಾಮಲಿಂಗಾರೆಡ್ಡಿ, ಝಮೀರ್ ಅಹ್ಮದ್ ಖಾನ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್, ಮಾಜಿ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್, ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ ರಂಗನಾಥ್, ಕದಲೂರು ವಿಜಯ್, ರವಿ ಗಣಿಗ, ಪೊನ್ನಣ್ಣ, ಎಂಎಲ್ಸಿಗಳಾದ ಪುಟ್ಟಣ್ಣ, ನಜೀರ್ ಅಹ್ಮದ್, ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.