Published
4 hours agoon
By
Akkare Newsದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್, “ಮಂಗಳೂರು ಅಪರಿಚಿತ ಯುವಕನ ಗುಂಪು ಹತ್ಯೆಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕಾರಣ” ಎಂದು ಹೇಳಿಕೆ ನೀಡಿದ್ದಾರೆ.
ಮಂಗಳೂರು ಗುಂಪು ಹತ್ಯೆ ಘಟನೆಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕಾರಣ ಎಂದ ಗೃಹ ಸಚಿವ ಪರಮೇಶ್ವರ್!ಎಂದು ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಘಟನೆಯ ಬಗ್ಗೆ ಬೆಂಗಳೂರಿನಲ್ಲಿ ಇಂಗ್ಲಿಷ್ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ನೀಡಿಲ್ಲ. ಆದರೆ, ಈ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಿದ್ದು ಯಾರು ಎಂಬ ಪ್ರಶ್ನೆಯನ್ನು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಗೃಹ ಸಚಿವ ಜಿ. ಪರಮೇಶ್ವರ್, “ಅಪರಿಚಿತ ವ್ಯಕ್ತಿಯೊಬ್ಬನ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ಅವರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗುತ್ತಿದ್ದರು. ಇದರಿಂದಾಗಿ ಅಲ್ಲಿದ್ದ ಕೆಲವರು ಅವರನ್ನು ಥಳಿಸಿದ್ದಾರೆ ಎಂದು ನನಗೆ ಬಂದಿರುವ ವರದಿ. ಒಂದು ವೇಳೆ ಅಪರಿಚಿತ ಯುವಕ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಿದ್ದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತು. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸಬಾರದಿತ್ತು. ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.
“ಸಂತ್ರಸ್ತ ಯುವಕ ಸ್ಥಳದಲ್ಲಿ ಸತ್ತಿರಲಿಲ್ಲ. ನಂತರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟಿರುವ ಯುವಕನ ವಿವರವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ” ಎಂದಿರುವ ಗೃಹ ಸಚಿವರು, “ಹೆಚ್ಚಿನ ತನಿಖೆ ನಡೆಯುತ್ತಿದೆ. ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
“ನನಗೆ ಇನ್ನೂ ಪೂರ್ಣ ವರದಿ ಬಂದಿಲ್ಲ. ಸುಮಾರು 10 ರಿಂದ 12 ಜನರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.