Published
3 months agoon
By
Akkare News
ಬೆಂಗಳೂರು, ಡಿಸೆಂಬರ್ 01: ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.


ಇದೇ ವೇಳೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ ಸ್ವತ್ತುಗಳಿಗೆ ಹೊಸದಾಗಿ ಇ-ಖಾತೆ ನೀಡುವ ಮಹತ್ವಾಕಾಂಕ್ಷಿ ಯೋಜನೆಗೂ ಚಾಲನೆ ನೀಡಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಇ ಸ್ವತ್ತು ತಂತ್ರಾಂಶದ ಮೂಲಕ ತಮ್ಮ ಆಸ್ತಿಯ ಸ್ಥಿತಿಗತಿಗಳನ್ನು ಪರಿಶೀಲಿಸಬಹುದು ಹಾಗೂ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಇ-ಖಾತೆ ಪಡೆಯಬಹುದಾಗಿದೆ.

ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಸಲುವಾಗಿ ಸರ್ಕಾರದ ವತಿಯಿಂದ ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಸ್ವತ್ತು ವ್ಯಾಪ್ತಿಗೆ ತರಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದು ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಹಾಗೂ 199ಸಿ ಸೇರಿಸಲಾಗಿರುತ್ತದೆ. ತಿದ್ದುಪಡಿಯನ್ನು ದಿನಾಂಕ: 07.04.2025 ರಂದು ಅಧಿಸೂಚಿಸಲಾಗಿರುತ್ತದೆ.


ಅದರ ಅನ್ವಯ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು- 2025ನ್ನು ರೂಪಿಸಲಾಗಿದೆ. ಈ ನಿಯಮಗಳು ದಿನಾಂಕ:17.10.2025ರ ಅಕ್ಟೋಬರ್ 17ರಿಂದ ಜಾರಿಗೊಂಡಿವೆ. ಹೊಸ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಅನುಸರಿಸಬೇಕಾದ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳು ವಸೂಲಾತಿ ಕ್ರಮಗಳ ಬಗ್ಗೆ ನಿಯಮಗಳಲ್ಲಿ ವಿವರವಾಗಿ ತಿಳಿಸಲಾಗಿದೆ. ಜೊತೆಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಹೇಳಲಾಗಿದೆ.
ಪ್ರತಿಯೊಂದು ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಅಧಿಕಾರಿಗಳ ಜವಾಬ್ದಾರಿಗಳು, ಜಾರಿಗೆ ಕಾಲಾವಧಿ, ಅಪೀಲು ಹೀಗೆ ಪ್ರತಿಯೊಂದು ವಿಷಯದಲ್ಲಿಯೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವಿವರಿಸಲಾಗಿದೆ. ನೂತನ ನಿಯಮಗಳ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿಯನ್ನು ನೀಡಲಾಗಿದೆ. ನಿಯಮಗಳ ಜಾರಿಗೆ ಪೂರಕವಾಗಿ ಪಂಚತಂತ್ರ ತಂತ್ರಾಂಶದಲ್ಲಿಯೂ ಅಗತ್ಯ ಮಾರ್ಪಾಡು ಮಾಡಲಾಗಿದ್ದು, ಇಂದು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗುತ್ತಿದೆ.


ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ – ಸ್ವತ್ತು ಪಡೆಯಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸುವರ್ಣಾವಕಾಶ ಕಲ್ಪಿಸಿದೆ. ತಂತ್ರಾಂಶದ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರ ಆಸ್ತಿಗಳಿಗೆ ಡಿಜಿಟಲ್ ಇ – ಸ್ವತ್ತು ಪ್ರಮಾಣ ಪತ್ರ (ನಮೂನೆ- 11ಎ ಮತ್ತು ನಮೂನೆ 11ಬಿ) ವಿತರಣೆಯನ್ನು ಆರಂಭಿಸಲಾಗುತ್ತಿದೆ. ಆಸ್ತಿ ಸಂಬಂಧಿತ ಸೇವೆಗಳನ್ನು ಪಾರದರ್ಶಕವಾಗಿ ಹಾಗೂ ತ್ವರಿತವಾಗಿ ಒದಗಿಸಲು ಉದ್ದೇಶಿಸಲಾಗಿದೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ವೃದ್ಧಿಗೊಳ್ಳಲಿದ್ದು, ಸ್ಥಳೀಯ ಸರ್ಕಾರವಾದ ಗ್ರಾಮ ಪಂಚಾಯತಿಗಳ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ. ತಂತ್ರಾಂಶದ ಮೂಲಕ ಇ-ಸ್ವತ್ತು ಪಡೆಯಲು ಎದುರಾಗುವ ಎಲ್ಲಾ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ-ಸ್ವತ್ತು ಸಹಾಯವಾಣಿ ( ಸಂಖ್ಯೆ: 9483476000) ಸ್ಥಾಪಿಸಲಾಗಿದೆ.



