Published
3 hours agoon
By
Akkare News
ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ನಿಯಂತ್ರಣ ಕ್ಕೆ ಅಧಿವೇಶನದಲ್ಲಿ ಅಶೋಕ್ ಕುಮಾರ್ ರೈ ಯಾವರು. ನಿರಂತರ ಪ್ರಶ್ನೆಗಳನ್ನು ಕೇಳುತ್ತಿದ್ದು, ಇದೀಗ ಸಿ ಎಂ ಸಿದ್ದರಾಮಯ್ಯರವರು. ಬಜೆಟ್ ನಲ್ಲಿ 10 ಕೋಟಿ ರೂಪಾಯಿ ಯನ್ನು ತೋಟಗಾರಿಕೆ ಇಲಾಖೆ ಮುಖಾಂತರ ಇಟ್ಟಿದ್ದು ನಮಗೆ ಬಹಳ ಸಂತೋಷವಾಗಿದೆ ಎಂದು ಅಶೋಕ್ ಕುಮಾರ್ ರೈ ಯವರು ತಿಳಿಸಿದ್ದಾರೆ.ಇದು ನನ್ನ ಹೋರಾಟದ ಫಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 2026-27ನೇ ಸಾಲಿನ ಬಜೆಟ್ನಲ್ಲಿ ಅಡಿಕೆ ಬೆಳೆಗಾರರಿಗೆ ಮಹತ್ವದ ನೆರವು ಘೋಷಿಸಲಾಗಿದೆ. ಎಲೆ ಚುಕ್ಕಿ, ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ 64 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ (Karnataka Budget 2026) ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಯೋಜನೆಯನ್ನು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ. ಜೊತೆಗೆ, ರಾಜ್ಯದ ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಹಂತ ಹಂತವಾಗಿ ಶೀತಲಗೃಹಗಳನ್ನು ನಿರ್ಮಿಸುವ ಯೋಜನೆಯೂ ಸರ್ಕಾರದ ಮುಂದಿದೆ.

ತೋಟಗಾರಿಕೆಯನ್ನು ರೈತರ ಆದಾಯ ಹೆಚ್ಚಿಸುವ ಪ್ರಮುಖ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಉತ್ತಮ ಗುಣಮಟ್ಟದ, ಅಧಿಕ ಮೌಲ್ಯದ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಬೆಳೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 89,000 ಹೆಕ್ಟೇರ್ ಪ್ರದೇಶದಲ್ಲಿ ಹೊಸ ತೋಟಗಾರಿಕೆ ಬೆಳೆಗಳನ್ನು ಅಳವಡಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದೇ ಅವಧಿಯಲ್ಲಿ 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ವ್ಯವಸ್ಥೆ ಅಳವಡಿಕೆಯಾಗಿದ್ದು, 2.36 ಲಕ್ಷ ರೈತರಿಗೆ ಇದರ ಪ್ರಯೋಜನ ದೊರೆತಿದೆ. ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ ಒಟ್ಟು 2,378 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಜೊತೆಗೆ 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳನ್ನು ನಿರ್ಮಿಸಲು ಸಹಾಯ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಇದರ ಜೊತೆಗೆ ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿರುವ ಲಭ್ಯ ಜಮೀನನ್ನು ಬಳಸಿಕೊಂಡು ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ (PPP) ಮಾದರಿಯಲ್ಲಿ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ.



