Published
4 hours agoon
By
Akkare News
ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಜುಲೈ 2ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಜೂನ್ 30ರಂದು ಪ್ರಮುಖವಾಗಿ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






