Published
8 hours agoon
By
Akkare News
ಪ್ರಜಾಪ್ರಭುತ್ವ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಪಡಿಸಿ, ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಮತದಾನದ ಹಕ್ಕು ಎಂದರೆ ಬದುಕುವ ಹಕ್ಕು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಮತದಾನದ ಹಕ್ಕಿನ ಪರವಾಗಿ ಬೆಂಗಳೂರಿನಿಂದಲೇ ಧ್ವನಿ ಎತ್ತಿದ್ದಾರೆ. ಕೇಂದ್ರ ಸರ್ಕಾರ ಹೇಗೆ ಮತಗಳ್ಳತನ ಮಾಡಿ, ಮತದಾರರ ಹಕ್ಕನ್ನು ಕಸಿಯುತ್ತಿದೆ ಎಂದು ಬಹಿರಂಗಪಡಿಸಿದ್ದಾರೆ. ಸಾಮಾನ್ಯ ಜನರ ಮತದಾನದ ಹಕ್ಕನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಈ ಅಕ್ರಮ ವ್ಯವಸ್ಥೆ ಮೂಲಕ ಈಗಾಗಲೇ ಪಶ್ಚಿಮ ಬಂಗಾಳ, ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ಕಾರವನ್ನು ನುಂಗಿದ್ದಾರೆ. ಈಗ ಕರ್ನಾಟಕ ಸೇರಿದಂತೆ ಎಲ್ಲೆಡೆಯೂ ಇದನ್ನು ಮಾಡಲು ಪ್ರಯತ್ನಿಸಲಾಗುತ್ತಿದೆ. ಕರ್ನಾಟಕದಲ್ಲೂ 1 ಕೋಟಿಗೂ ಅಧಿಕ ಮತಗಳನ್ನು ತೆಗೆದುಹಾಕಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಈ ಪ್ರಕ್ರಿಯೆಗೆ ಸಹಕಾರ ನೀಡಿದ್ದೇನೆ. ಆದರೆ ಈ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಮತ್ತಷ್ಟು ಸಮಯ ನೀಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬುಧವಾರ ಮನವಿ ಮಾಡಿದ್ದೇನೆ. ಮತದಾರರ ಪಟ್ಟಿ ಅಂತಿಮವಾಗಲಿ, ನಂತರ ಇದರ ವಿರುದ್ಧ ಯಾವ ರೀತಿ ಧ್ವನಿ ಎತ್ತಿ ಹೋರಾಟ ಮಾಡಬೇಕು ಎಂದು ತಿಳಿಸುವೆ ಎಂದು ಹೇಳಿದರು.
. ಚುನಾವಣಾ ಆಯೋಗದೊಳಗಿನ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಆಯೋಗದ ಸ್ವಾಯತ್ತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಬಹುಮತದ (ಮೂರನೇ ಎರಡರಷ್ಟು) ಸದಸ್ಯರ ಬೆಂಬಲ ಸಿಗದೇ ಏಕಪಕ್ಷೀಯವಾಗಿ ಯಾವುದೇ ಘೋಷಣೆ, ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಚುನಾವಣಾ ಆಯೋಗದ ಹೆಸರಿನಲ್ಲಿ ರಾಜ್ಯಗಳ ಅಧಿಕಾರಿಗಳನ್ನು ಬೆದರಿಸಲು ಸಾಧ್ಯವಿಲ್ಲ. ನೈತಿಕ ಹೊಣೆಗಾರಿಕೆಯನ್ನು ಅರಿತು ಮುಖ್ಯ ಚುನಾವಣಾ ಆಯುಕ್ತ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವುದು ಉತ್ತಮ. ಹೊಸ ಎಸ್ಐಆರ್ ಪ್ರಕ್ರಿಯೆ ನಡೆಸಬೇಕು ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.


