Published
3 hours agoon
By
Akkare News
ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ನಡೆದ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ ನಿಂತ ಎಲ್ಲಾ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಮಾಜದ ನಾಯಕರು, ಸಾರ್ವಜನಿಕರು, ಮಾಧ್ಯಮ ಮಿತ್ರರು ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತೇವೆ. ಹೋರಾಟದ ಪ್ರತಿಯೊಂದು ಹಂತದಲ್ಲೂ ನಮ್ಮ ಬೆನ್ನೆಲುಬಾಗಿ ನಿಂತ ಸರ್ವರ ಸಹಕಾರ ಮತ್ತು ಒಗ್ಗಟ್ಟು ನಮಗೆ ಮತ್ತಷ್ಟು ಶಕ್ತಿ ತುಂಬಿದೆ.
ಆದರೆ, ನಮ್ಮ ಹೋರಾಟ ಇಲ್ಲಿಗೆ ಅಂತ್ಯಗೊಂಡಿಲ್ಲ. ಪ್ರದೀಪ್ ಪೂಜಾರಿ ಸಾವಿಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಎಸಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಪುನೀತ್ ಅವರನ್ನು ಅಮಾನತುಗೊಳಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ.
ಅಲ್ಲದೆ, ಪ್ರದೀಪ್ ಪೂಜಾರಿ ವಿರುದ್ಧ ದಾಖಲಿಸಲಾಗಿದ್ದ ಅತ್ಯಾಚಾರ ಪ್ರಕರಣದ ಸತ್ಯಾಸತ್ಯತೆ, ಅದರ ಹಿಂದಿರುವ ವಿಚಾರಗಳು ಹಾಗೂ ಅವರನ್ನು ಮಾನಸಿಕವಾಗಿ ಕುಗ್ಗಿಸಿ ಆತ್ಮಹತ್ಯೆಗೆ ಪ್ರೇರೇಪಿಸಲಾಗಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ.







