Published
8 months agoon
By
Akkare Newsಬೆಂಗಳೂರು, ಎ.29: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (75) ಅವರು ಇಂದು ನಿಧನರಾಗಿದ್ದಾರೆ.
ಕುಟುಂಬದ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ಬಂಧು ಮಿತ್ರರನ್ನು ಶ್ರೀಯುತರು ಆಗಲಿದ್ದಾರೆ. ಸೋಮವಾರ ಬೆಳಗಿನ ಜಾವ 3:30ರ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ ಹಲವು ದಿನಗಳಿಂದ ಪ್ರಸಾದ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.
ಮೃತರ ಪಾರ್ಥಿವ ಶರೀರವನ್ನು ಬೆಳಗ್ಗೆ ಮೈಸೂರಿಗೆ ಕೊಂಡೊಯ್ದು ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಇರಿಸಲಾಗುವುದು ಎಂದು
ಕುಟುಂಬದ ಮೂಲಗಳು ತಿಳಿಸಿದೆ.
ಜನತಾ ಪರಿವಾರದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ವಿಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸಿ ವಿಧಾನಸಭೆ ಹಾಗೂ ಸಂಸತ್ ಗೆ ಆಯ್ಕೆಯಾಗಿದ್ದರು.
2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಯಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೊನ್ನೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಪ್ರಚಾರಕ್ಕೆ ತೆರಳದ ದೂರ ಉಳಿದಿದ್ದರು.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದರು. ಶ್ರೀಯುತರ ಅಂತಿಮ ಸಂಸ್ಕಾರ ಮೈಸೂರಿನಲ್ಲಿ ನೆರವೇರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.